ರತ್ನನ್ ಪರ್ಪಂಚ.

ಯೇಳ್ಕೊಳ್ಳಾಕ್ ಒಂದ್ ಊರು
ತಲೇಮೇಗ್ ಒಂದ್ ಸೂರು
ಮಲಗಾಕೆ ಬೂಮ್ತಾಯಿ ಮಂಚ;
ಕೈ ಯಿಡದೋಳ್ ಪುಟ್ನಂಜಿ
ನೆಗನೆಗತ ಉಪ್ಗಂಜಿ
ಕೊಟ್ರಾಯ್ತು ರತ್ನನ್ ಪರ್ಪಂಚ!

ಅಗಲೆಲ್ಲ ಬೆವರ್ ಅರ್ಸಿ
ತಂದದ್ರಲ್ಲ್ ಒಸಿ ಮುರ್ಸಿ
ಸಂಜೇಲಿ ವುಳಿ ಯೆಂಡ ಕೊಂಚ
ಯೀರ್‍ತ ಮೈ ಝುಂ ಅಂದ್ರೆ
ವಾಸ್ನೆ ಘಂ ಘಂ ಅಂದ್ರ್‍ಎ
ತುಭೋಯ್ತು ರತ್ನನ್ ಪರ್ಪಂಚ!

ಏನೋ ಕುಸಿಯಾದಾಗ
ಮತ್ತ್ ಎಚ್ಚಿ ಓದಾಗ
ಅಂಗೇನೆ ಪರಪಂಚದ್ ಅಂಚ
ದಾಟ್ಕಂಡಿ ಆರಾಡ್ತ
ಕನ್ನಡದಲ್ ಪದವಾಡ್ತ
ಇಗ್ಗೋದು ರತ್ನನ್ ಪರ್ಪಂಚ!

ದುಕ್ಕಿಲ್ಲ ದಾಲಿಲ್ಲ
ನಮಗ್ ಅದರಾಗ್ ಪಾಲಿಲ್ಲ
ನಾವ್ ಕಂಡಿಲ್ಲ್ ಆ ತಂಚ ವಂಚ;
ನಮ್ಮಸ್ಟಕ್ ನಾವಾಗಿ
ಇದ್ದಿದ್ರಲ್ಲ್ ಆಯಾಗಿ
ಬಾಳೋದು ರತ್ನನ್ ಪರ್ಪಂಚ!

’ಬಡತನ ಗಿಡತನ
ಏನಿದ್ರೇನ್ ? ನಡೆತೇನ
ಚೆಂದಾಗ್ ಇಟ್ಕೊಳ್ಳಾದೆ ಅಚ್ಛ!’ -
ಅಂದ್ಕೊಂಡಿ ಸುಕವಾಗಿ
ಕಸ್ಟಕ್ ನೆಗಮೊಕವಾಗಿ
ನೆಗೆಯೋದೆ ರತ್ನನ್ ಪರ್ಪಂಚ!

ದೇವ್ರ್ ಏನ್ರ ಕೊಡಲಣ್ಣ
ಕೊಡದಿದ್ರೆ ಬುಡಲಣ್ಣ
ನಾವೆಲ್ಲ ಔನೀಗೆ ಬಚ್ಚ!
ಔನ್ ಆಕಿದ್ ತಾಳ್ದಂಗೆ
ಕಣ್ ಮುಚ್ಚೊಂಡ್ ಯೇಳ್ದಂಗೆ
ಕುಣಿಯಾದೆ ರತ್ನನ್ ಪರ್ಪಂಚ!

Comments

Popular posts from this blog

ಮುದ್ದಣ ಮನೋರಮೆಯ ಸಲ್ಲಾಪ - ಶ್ರೀವತ್ಸ ಜೋಶಿ

ಕನ್ನಡ ಕಾದಂಬರಿ ಮತ್ತು ಪುಸ್ತಕಗಳು

ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು