ಶಿವಮಂದಿರಸಮ ವನಸುಂದರ - ಕುವೆಂಪು
ಶಿವಮಂದಿರಸಮ ವನಸುಂದರ ಸುಮಶೃಂಗಾರದ ಗಿರಿಶೃಂಗಕೆ ಬಾ!
ಬಾ ಫಾಲ್ಗುಣ ರವಿ ದರ್ಶನಕೆ!
ಕುಂಕುಮ ಧೂಳಿಯ ದಿಕ್ತಟವೇದಿಯೊಳೋಕುಳಿಯಲಿ ಮಿಂದೇಳುವನು
ಕೋಟಿವಿಹಂಗಮ ಮಂಗಲರವ ರಸನೈವೇದ್ಯಕೆ ಮುದ ತಾಳುವನು
ಚಿನ್ನದ ಚೆಂಡನೆ ಮೂಡುವನು; ಹೊನ್ನನೆ ಹೊಯ್‌ನೀರ್ ನೀಡುವನು
ಸೃಷ್ಟಿಯ ಹೃದಯಕೆ ಪ್ರಾಣಾಗ್ನಿಯ ಹೊಳೆಹರಿಯಿಸಿ ರವಿ ದಯಮಾಡುವನು || ಬಾ ||
ತೆರೆತೆರೆಯಾಗಿಹ ನೊರೆನೊರೆ ಕಡಲೆನೆ ನೋಡುವ ಕಣ್ಣೋಡುವವರೆಗೆ
ಬನಸಿರಿ ತುಂಬಿದ ಕಣಿವೆಯ ಹಂಬಿರೆ ಧೂಳೀಸಮಹಿಮ ಬಾನ್‌ಕರೆಗೆ
ಪ್ರತಿಭೆಯ ಹೋಮಾಗ್ನಿಯ ಮೇಲೆ ಕವಿಮನ ತಾನುರಿದುರಿದೇಳೆ
ಮರಗಿಡದಲಿ ಜಡದೊಡಲಲಿ ಇದೆಕೋ ಸ್ಪಂದಿಸುತಿದೆ ಭಾವಜ್ವಾಲೆ || ಬಾ ||
ವರ್ಣನದಿಂದ್ರಿಯ ನಂದನವನು ದಾಂಟುತೆ ದರ್ಶನ ಮುಕ್ತಿಯ ಸೇರಿ
ವ್ಯಕ್ತಿತೆ ಮೈಮರೆವುದು ಸೌಂದರ್ಯ ಸಮಾಧಿಯೊಳಾನಂದವ ಹೀರಿ
ಸರ್ವೇಂದ್ರಿಯ ಸುಖನಿಧಿ ಅಲ್ಲಿ; ಸರ್ವಾತ್ಮನ ಸನ್ನಿಧಿ ಅಲ್ಲಿ
ಸಕಲಾರಾಧನ ಸಾಧನಬೋಧನ ಅನುಭವರಸ ತಾನಹುದಲ್ಲಿ || ಬಾ ||
ಸಾಹಿತ್ಯ – ಕುವೆಂಪು
ಗಾಯನ - ನರಸಿಂಹ ನಾಯಕ್
Comments
Post a Comment