Sunday, March 17, 2013

ಶಿವಮಂದಿರಸಮ ವನಸುಂದರ - ಕುವೆಂಪು


ಶಿವಮಂದಿರಸಮ ವನಸುಂದರ ಸುಮಶೃಂಗಾರದ ಗಿರಿಶೃಂಗಕೆ ಬಾ!
ಬಾ ಫಾಲ್ಗುಣ ರವಿ ದರ್ಶನಕೆ!

ಕುಂಕುಮ ಧೂಳಿಯ ದಿಕ್ತಟವೇದಿಯೊಳೋಕುಳಿಯಲಿ ಮಿಂದೇಳುವನು
ಕೋಟಿವಿಹಂಗಮ ಮಂಗಲರವ ರಸನೈವೇದ್ಯಕೆ ಮುದ ತಾಳುವನು
ಚಿನ್ನದ ಚೆಂಡನೆ ಮೂಡುವನು; ಹೊನ್ನನೆ ಹೊಯ್‌ನೀರ್ ನೀಡುವನು
ಸೃಷ್ಟಿಯ ಹೃದಯಕೆ ಪ್ರಾಣಾಗ್ನಿಯ ಹೊಳೆಹರಿಯಿಸಿ ರವಿ ದಯಮಾಡುವನು || ಬಾ ||

ತೆರೆತೆರೆಯಾಗಿಹ ನೊರೆನೊರೆ ಕಡಲೆನೆ ನೋಡುವ ಕಣ್ಣೋಡುವವರೆಗೆ
ಬನಸಿರಿ ತುಂಬಿದ ಕಣಿವೆಯ ಹಂಬಿರೆ ಧೂಳೀಸಮಹಿಮ ಬಾನ್‌ಕರೆಗೆ
ಪ್ರತಿಭೆಯ ಹೋಮಾಗ್ನಿಯ ಮೇಲೆ ಕವಿಮನ ತಾನುರಿದುರಿದೇಳೆ
ಮರಗಿಡದಲಿ ಜಡದೊಡಲಲಿ ಇದೆಕೋ ಸ್ಪಂದಿಸುತಿದೆ ಭಾವಜ್ವಾಲೆ || ಬಾ ||

ವರ್ಣನದಿಂದ್ರಿಯ ನಂದನವನು ದಾಂಟುತೆ ದರ್ಶನ ಮುಕ್ತಿಯ ಸೇರಿ
ವ್ಯಕ್ತಿತೆ ಮೈಮರೆವುದು ಸೌಂದರ್ಯ ಸಮಾಧಿಯೊಳಾನಂದವ ಹೀರಿ
ಸರ್ವೇಂದ್ರಿಯ ಸುಖನಿಧಿ ಅಲ್ಲಿ; ಸರ್ವಾತ್ಮನ ಸನ್ನಿಧಿ ಅಲ್ಲಿ
ಸಕಲಾರಾಧನ ಸಾಧನಬೋಧನ ಅನುಭವರಸ ತಾನಹುದಲ್ಲಿ || ಬಾ ||

ಸಾಹಿತ್ಯ – ಕುವೆಂಪು
ಗಾಯನ - ನರಸಿಂಹ ನಾಯಕ್


No comments:

Post a Comment

ಅಮೃತವರ್ಷಿಣಿ - ಸುಭಾಷಿತ -4

ಕ್ಲೈಬ್ಯಂ ಮಾ ಸ್ಮ ಗಮಃ ಪಾರ್ಥ ನೈತತ್ತ್ವಯ್ಯುಪಪದ್ಯತೇ | ಕ್ಷುದ್ರಂ ಹೃದಯದೌರ್ಬಲ್ಯಂ ತ್ಯಕ್ತ್ವೋತ್ತಿಷ್ಠ ಪರಂತಪ || 📖 ಮೂಲ: 'ಶ್ರೀಮದ್ಭಗವದ್ಗೀತೆ' (ಅಧ್ಯಾಯ ...